ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಎಪ್ರಿಲ್ 9 ರಂದು ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ.
ನವದೆಹಲಿ: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ದಿನಾಂಕ ಪ್ರಕಟವಾಗಿದೆ. ಎಪ್ರಿಲ್ 9 ರಂದು ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಇಂದು ಪ್ರಕಟಿಸಿದೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ಕರೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಚುನಾವಣಾ ಆಯೋಗವು ಪಶ್ಚಿಮ ಬಂಗಾಳ, ಅಸ್ಸೋಂ, ತಮಿಳುನಾಡು, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಜೊತೆಗೆ ಉಪ ಚುನಾವಣೆಯ ದಿನಾಂಕವನ್ನೂ ಘೋಷಿಸಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ಹಿರಿಯ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ತೆರವಾಗಿರುವ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದೆ. ಎಪ್ರಿಲ್ 9 ರಂದು ಮತದಾನ, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಶಾಮನೂರು ಶಿವಶಂಕರಪ್ಪ ಅವರು ಇದೇ ಕ್ಷೇತ್ರದಿಂದ ಸತತ ಆರು ಬಾರಿ ಚುನಾವಣೆ ಎದುರಿಸಿ ಕೈ ಭದ್ರಕೋಟೆ ಕಟ್ಟಿದ್ದರು. ಕ್ಷೇತ್ರದಲ್ಲಿ ಅಲ್ಪಸಂಖ್ಯಾತರೇ ನಿರ್ಣಾಯಕ ಆಗಿರುವುದರಿಂದ ಟಿಕೆಟ್ ತಮಗೇ ನೀಡಬೇಕೆಂದು ಕಾಂಗ್ರೆಸ್ ನಲ್ಲಿರುವ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಪಟ್ಟು ಹಿಡಿದಿದ್ದಾರೆ. ಇತ್ತ ಬಿಜೆಪಿಯಲ್ಲೂ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 2,32,564 ಲಕ್ಷ ಮತದಾರರಿದ್ದಾರೆ. ಈ ಪೈಕಿ ಪುರುಷರು 1,14,165, ಮಹಿಳೆಯರು 1,18,355 ಮತ್ತು ತೃತೀಯ ಲಿಂಗಿಗಳು 44 ಜನರಿದ್ದಾರೆ. ಇದರಲ್ಲಿ 80 ಸಾವಿರಕ್ಕೂ ಅಧಿಕ ಅಲ್ಪಸಂಖ್ಯಾತ ಮತದಾರರಿದ್ದಾರೆ.
ಬಾಗಲಕೋಟೆ ಕ್ಷೇತ್ರ: ಕಾಂಗ್ರೆಸ್ ಹಿರಿಯ ಶಾಸಕರಾಗಿದ್ದ ಹೆಚ್.ವೈ. ಮೇಟಿ ಅಗಲಿಕೆಯಿಂದ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ತೆರವಾಗಿದ್ದು, ಎಪ್ರಿಲ್ 9 ಉಪಚುನಾವಣೆ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಹೊರಬೀಳಲಿದೆ. ದಿ. ಹೆಚ್.ವೈ. ಮೇಟಿ ಅವರ ಹಿರಿಯ ಪುತ್ರ ಮಲ್ಲಿಕಾರ್ಜುನ ಮೇಟಿ ಅವರಿಗೆ ಟಿಕೆಟ್ ಕೊಡಬೇಕೆಂಬ ನಿರ್ಧಾರವಾಗಿದೆ ಎಂದು ಹೇಳಲಾಗುತ್ತಿದ್ದರೂ ಅಧಿಕೃತವಾಗಿ ಪಕ್ಷದಿಂದ ಮಾಹಿತಿ ಸಿಗಬೇಕಿದೆ. ಈ ಮಧ್ಯೆ ಮೇಟಿ ಅವರ ಕೊನೆಯ ಪುತ್ರಿ ಮಹಾದೇವಿ ಮೇಟಿ ಸಹ ತನಗೇ ಟಿಕೆಟ್ ನೀಡಬೇಕು, ಇಲ್ಲವೇ ಬಂಡಾಯದ ಬಾವುಟ ಹಾರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮತ್ತೊಂದೆಡೆ ಬಿಜೆಪಿಯಲ್ಲಿ ವೀರಣ್ಣ ಚರಂತಿಮಠ ಅವರಿಗೆ ಟಿಕೆಟ್ ಬಹುತೇಕ ಖಚಿತವಾಗಿದೆ. ಆದರೂ ಸಹ ವಿಧಾನ ಪರಿಷತ್ ಸದಸ್ಯರಾದ ಪಿ.ಹೆಚ್. ಪೂಜಾರ ಹಾಗೂ ಅವರ ಬೆಂಬಲಿಗರು ತಮಗೆ ಟಿಕೆಟ್ ನೀಡುವಂತೆ ಪಕ್ಷದ ನಾಯಕರಿಗೆ ದುಂಬಾಲು ಬಿದ್ದಿದ್ದಾರೆ.
ಬಾಗಲಕೋಟೆ ಮತಕ್ಷೇತ್ರದಲ್ಲಿ ಹಿಂದಿನ ವಿಧಾನಸಭೆಯ ಚುನಾವಣೆ ಒಟ್ಟು ಮತದಾರರ ಸಂಖ್ಯೆ 2,49,385 ಇದ್ದು, ಇದರಲ್ಲಿ ಪುರುಷರು 1,26,089. ಮಹಿಳೆಯರು 1,23,243 ಮತದಾರರಿದ್ದಾರೆ.